ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಆಗಿದೆ. ನಷ್ಟದ ವಿವರಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ಪರಿಹಾರದ ಪ್ರಸ್ತಾವ ಸಲ್ಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು
ಮಾತನಾಡಿದರು.
ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನಷ್ಟದ ಸ್ಥಳಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಬೇಕು. ಶೀಘ್ರ ಹಣ ಮಂಜೂರು ಮಾಡಿಸಿ, ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದರು.
ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರ ನಗರದವರೆಗಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ₹ 275 ಕೋಟಿ ಯೋಜನೆಯನ್ನು ರೂಪಿಸಲಾಗಿದೆ. ತಿಂಗಳ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಕೃಷಿ ಸಮ್ಮಾನ್ ಯೋಜನೆ, ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕು. ರೈತರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಅಧಿಕಾರಿಗಳು ರೂಪಿಸಬೇಕು. ಜಿಲ್ಲೆಯಲ್ಲಿ ಪದವಿ ಪೂರ್ವ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ರೈತರ ಮಕ್ಕಳ ವಿವರವನ್ನು ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕು ಎಂದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ 13 ಲಕ್ಷ ಜನರನ್ನು ಜಿಲ್ಲೆಯಲ್ಲಿ ನೋಂದಾಯಿಸಬೇಕು. ಈವರೆಗೆ 2 ಲಕ್ಷ ಜನರನ್ನು ಮಾತ್ರ ನೋಂದಾಯಿಸಲಾಗಿದೆ. ಮುಂದಿನ 6 ತಿಂಗಳ ಒಳಗೆ ಉಳಿದ 11 ಲಕ್ಷ ಜನರನ್ನು ನೋಂದಾಯಿಸಬೇಕು ಎಂದು ಹೇಳಿದರು.
2 ತಿಂಗಳ ಒಳಗಾಗಿ ಜಿಲ್ಲಾ ವಾಲ್ಮೀಕಿ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಬೇಕು. ಗಾಂಧಿ ಭವನ ನಿರ್ಮಾಣವಾಗಬೇಕು. ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ, ದೇವರಾಜು ಅರಸು ಭವನ ಹಾಗೂ ಕನಕ ಭವನ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದರು.
ಈ ವೇಳೆ ನಗರ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಅನುಕಂಪದ ಆಧಾರದ ಮೇಲೆ ನೇಮಕವಾದ ಸರ್ಕಾರಿ ನೌಕರರಿಗೆ ನೇಮಕಾತಿ ಆದೇಶ ಪತ್ರಗಳನ್ನು ಸಚಿವರು ವಿತರಿಸಿದರು.
ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಆಗಿದೆ. ನಷ್ಟದ ವಿವರಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ಪರಿಹಾರದ ಪ್ರಸ್ತಾವ ಸಲ್ಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.