ADVERTISEMENT

ಮಾರ್ಚ್‌ 12ಕ್ಕೆ ರಾಷ್ಟ್ರೀಯ ಲೋಕ ಅದಾಲತ್

ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ– ಎಸ್. ಮಹಾಲಕ್ಷ್ಮಿ ನೇರಳೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2022, 6:48 IST
Last Updated 20 ಜನವರಿ 2022, 6:48 IST
ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಎಸ್. ಮಹಾಲಕ್ಷ್ಮಿ ನೇರಳೆ ಮಾತನಾಡಿದರು
ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಎಸ್. ಮಹಾಲಕ್ಷ್ಮಿ ನೇರಳೆ ಮಾತನಾಡಿದರು   

ಗದಗ: ‘ಮಾರ್ಚ್‌ 12ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್. ಮಹಾಲಕ್ಷ್ಮಿ ನೇರಳೆ ತಿಳಿಸಿದರು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರರಿಗೆ ಸಮಯ ಹಾಗೂ ಹಣ ಉಳಿತಾಯವಾಗಲಿದೆ. ಸಾಧ್ಯವಾದಷ್ಟು ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕಾನೂನು ಸೇವಾ ಪ್ರಾಧಿಕಾರ ಕಾರ್ಯಪ್ರವೃತ್ತವಾಗಿದೆ’ ಎಂದು ತಿಳಿಸಿದರು.

‘ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ, ರೋಣ, ಮುಂಡರಗಿ, ಲಕ್ಷ್ಮೇಶ್ವರ ಹಾಗೂ ನರಗುಂದ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯಿಂದ ರಾಷ್ಟ್ರೀಯ ಲೋಕ ಅದಾಲತ್‌ ನಡೆಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ ಅದಾಲತ್‌ಗೆ ಪರಿಗಣಿಸಲಾಗುವುದು’ ಎಂದು ತಿಳಿಸಿದರು. 

ADVERTISEMENT

‘ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ (ವಿಚ್ಛೇದನ ಹೊರತುಪಡಿಸಿ) ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಆನ್‌ಲೈನ್, ವಿಡಿಯೊ ಕಾನ್ಫರೆನ್ಸ್‌, ಇ– ಮೇಲ್, ವಾಟ್ಸ್ ಆ್ಯಪ್‌, ಎಲೆಕ್ಟ್ರಾನಿಕ್ ಮೋಡ್ ಮೂಲಕ ಸಂಪರ್ಕಿಸಿ ಲೋಕ ಅದಾಲತ್‌ನಲ್ಲಿ ಶೀಘ್ರ ಇತ್ಯರ್ಥಪಡಿಸಿ, ಪರಿಹಾರ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ನ್ಯಾಯಾಲಯದಲ್ಲಿನ ಪ್ರಕರಣಗಳಿಗೆ ಲೋಕ ಅದಾಲತ್‌ನಲ್ಲಿ ಆನ್‌ಲೈನ್ ಮೂಲಕ ಪರಿಹಾರ ನೀಡಲಾಗುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ಸಾರ್ವಜನಿಕರು ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಮಾಸ್ಕ್‌ ಧರಿಸುವುದು, ಸುರಕ್ಷಿತ ಅಂತರದೊಂದಿಗೆ ವ್ಯವಹರಿಸುವುದು, ನಿಯಮಿತವಾಗಿ ಕೈತೊಳೆಯುವುದನ್ನು ರೂಢಿಸಿಕೊಳ್ಳಬೇಕು’ ಎಂದು ಸೂಚಿಸಿದರು.

ಹಿರಿಯ ದಿವಾಣಿ ನ್ಯಾಯಾಧೀಶ ಸಿಜೆಎಂ ರಾಜಣ್ಣ ಸಂಕಣ್ಣವರ, ಆರೋಗ್ಯ ಇಲಾಖೆಯ ಡಾ. ಪ್ರವೀಣ ನಿಡಗುಂದಿ ಇದ್ದರು.

ಸಾವಿರಾರು ಪ್ರಕರಣಗಳು ಇತ್ಯರ್ಥ

‘ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ದೊರಕಬೇಕು. ನ್ಯಾಯಾಲಯಗಳ ಪ್ರಕರಣಗಳು ನ್ಯಾಯಯುತವಾಗಿ ಅಂತ್ಯವಾಗುವುದರೊಂದಿಗೆ ಕಾನೂನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರವು ಕಾರ್ಯನಿರ್ವಹಿಸುತ್ತಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಹೇಳಿದರು.

‘ಈ ಹಿಂದೆ ನಡೆದ ಲೋಕ ಅದಾಲತ್‌ನಲ್ಲಿ ಸಾವಿರಾರು ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ. ಹಲವಾರು ವೈವಾಹಿಕ ಪ್ರಕರಣಗಳು ಸುಖಾಂತ್ಯ ಕಂಡಿವೆ’ ಎಂದು ತಿಳಿಸಿದರು.

ಸಾರಾಂಶ

ಗದಗ: ‘ಮಾರ್ಚ್‌ 12ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್. ಮಹಾಲಕ್ಷ್ಮಿ ನೇರಳೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.