ಮಂಡ್ಯ: ಜಿಲ್ಲೆಯ ರೈತರಿಗೆ ನೆರವಾಗಲು, ಬೇಸಿಗೆ ಬೆಳೆಗೆ ನೀರು ಹರಿಸುವ ಸಂಬಂಧ ಕೆಆರ್‌ಎಸ್ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಪತ್ರ ಬರೆದಿದ್ದು, ಪ್ರಸಕ್ತ ಸಾಲಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಕೃಷ್ಣ ರಾಜಸಾಗರ ಸೇರಿದಂತೆ ಕಾವೇರಿ ನದಿ ಪಾತ್ರದ ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರು ಸಂಗ್ರಹವಾಗಿದೆ. ಇದರಿಂದ ಬೆಳೆಗಳಿಗೆ ಹಾಗೂ ಕುಡಿಯುವ ನೀರಿನ ಬಳಕೆಗೆ ಕೊರತೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಎಲ್ಲ ಭಾಗಗಳಲ್ಲಿ ಮಳೆ ನಿಂತಿದ್ದು, ಚಳಿಗಾಲ ಪ್ರಾರಂಭವಾಗಿದೆ. ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ರೈತರು ಬೆಳೆದಿರುವ ಕಬ್ಬು ಮತ್ತು ಇತರ ಬೆಳೆಗಳು ನೀರಿನ ಕೊರತೆಯಿಂದಾಗಿ ಒಣಗುತ್ತಿವೆ. ತಕ್ಷಣ ಕೆ.ಆರ್.ಎಸ್. ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿದರೆ ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ವರ್ಷ ಜಲಾಶಯದಲ್ಲಿ ಸಾಕಷ್ಟು ನೀರು ಲಭ್ಯವಿರುವುದರಿಂದ ಕೆ.ಆರ್.ಎಸ್. ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಬೆಳೆಗೂ ನೀರಿನ ಕೊರತೆ ಎದುರಾಗುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಸಮಾಲೋಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಿದೆ. ಆದ್ದರಿಂದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯನ್ನು ತ್ವರಿತವಾಗಿ ಕರೆದು ರೈತರಿಗೆ ನೆರವಾಗಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಂಡ್ಯ: ಜಿಲ್ಲೆಯ ರೈತರಿಗೆ ನೆರವಾಗಲು, ಬೇಸಿಗೆ ಬೆಳೆಗೆ ನೀರು ಹರಿಸುವ ಸಂಬಂಧ ಕೆಆರ್‌ಎಸ್ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.