ADVERTISEMENT

ಕಾಗೋಡು ತಿಮ್ಮಪ್ಪಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 5:11 IST
Last Updated 21 ಜನವರಿ 2022, 5:11 IST
ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ   

ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಗುರುವಾರ ದೃಢಪಟ್ಟಿದೆ ಎಂದು ಕಾಗೋಡು ಪುತ್ರಿ, ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂಗಳವಾರ ಕಾಗೋಡು ತಿಮ್ಮಪ್ಪ ಅವರಿಗೆ ಅಲ್ಪಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಅವರ ಗಂಟಲದ್ರವದ ಮಾದರಿಯನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗಾಗಿ ತೆಗೆಯಲಾಗಿತ್ತು. ಇವತ್ತಿನವರೆಗೂ ವರದಿ ಏನಾಗಿದೆ ಎಂದು ಆಸ್ಪತ್ರೆಯವರು ಮಾಹಿತಿ ನೀಡಿಲ್ಲ. ಎಪಿಎಂಸಿ ಸದಸ್ಯ ಕೆ. ಹೊಳಿಯಪ್ಪ ಅವರು ಆಸ್ಪತ್ರೆಗೆ ಹೋಗಿದ್ದಾಗ ವಿಷಯ ತಿಳಿದು ನಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಮಾಜಿ ಆರೋಗ್ಯ ಸಚಿವರ ವಿಷಯದಲ್ಲೇ ಆಸ್ಪತ್ರೆಯವರು ಇಷ್ಟೊಂದು ನಿರ್ಲಕ್ಷ್ಯ ತೋರಿದರೆ ಸಾಮಾನ್ಯ ಜನರ ಗತಿಯೇನು’ ಎಂದು ಪ್ರಶ್ನಿಸಿದರು.

‘ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರೂ ಗಂಭೀರವಾದ ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ. ಈಚೆಗೆ ಅವರು ಅರಣ್ಯಭೂಮಿ ಹಕ್ಕು ಕಾಯ್ದೆ ಹೋರಾಟಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಚಿಕ್ಕನೆಲ್ಲೂರು, ಚಕ್ಕೋಡಿ ಗ್ರಾಮದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲೂ ಭಾಗವಹಿಸಿದ್ದರು. ಹೀಗಾಗಿ ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

ಕಾಗೋಡು ತಿಮ್ಮಪ್ಪ ಅವರು ಸದ್ಯ ಹೋಂ ಕ್ವಾರಂಟೈನ್‌ನಲ್ಲಿದ್ದು, ಪಕ್ಷದ ಕಾರ್ಯಕರ್ತರು ಅಥವಾ ಅಭಿಮಾನಿಗಳು ಅವರನ್ನು ಸದ್ಯ ಭೇಟಿಯಾಗಲು ಬರುವುದು ಸೂಕ್ತವಲ್ಲ. ಶೀಘ್ರ ಅವರು ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ ಎಂದರು.

ಕಾಂಗ್ರೆಸ್ ಪ್ರಮುಖರಾದ ಮಧು ಮಾಲತಿ, ಎನ್. ಲಲಿತಮ್ಮ, ವೆಂಕಟೇಶ್ ಮೆಳವರಿಗೆ, ಸಚಿನ್ ಇದ್ದರು.

ಸಾರಾಂಶ

ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಗುರುವಾರ ದೃಢಪಟ್ಟಿದೆ ಎಂದು ಕಾಗೋಡು ಪುತ್ರಿ, ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.