ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಎತ್ತಿನಹೊಳೆ ಕಾಮಗಾರಿಗೆ ಅಡ್ಡಿಯಾಗಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದ್ದು, ಪರ್ಯಾಯವಾಗಿ ಕಂದಾಯ ಇಲಾಖೆಯು 500 ಎಕರೆ ಜಾಗವನ್ನು ಅರಣ್ಯ ಇಲಾಖೆಗೆ ನೀಡಲಿದೆ’ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಎತ್ತಿನಹೊಳೆ ಯೋಜನೆ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಶಿವಕುಮಾರ್ ಗುರುವಾರ ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಅವರು, ‘ಜಾಗವನ್ನು ಹಸ್ತಾಂತರ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಯೋಜನೆಯ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕುವ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ’ ಎಂದರು.
‘260 ಕಿ.ಮೀ ಉದ್ದದಲ್ಲಿ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಸರ್ವೇ ನಡೆಸಲಿವೆ’ ಎಂದರು.
‘ಕೆಲವು ಜಾಗದಲ್ಲಿ ರೈತರಿಗೆ ಪರಿಹಾರವಾಗಿ ₹ 51 ಕೋಟಿ ನೀಡಬೇಕಾಗಿದೆ. ಈ ಪೈಕಿ, ₹ 10 ಕೋಟಿ ನೀಡಲಾಗಿದ್ದು, ₹ 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು’ ಎಂದರು.
‘ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿಯಿದ್ದು, ಅದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ.ವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದಿಂದ, ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಾಗುವುದು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.