ಮುಜಾಫರ್‌ನಗರ: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಮತ್ತು ಬೆಳೆಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನು ಚೌಕಟ್ಟಿನಲ್ಲಿ ತರುವುದು ಸೇರಿದಂತೆ, ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದರು.
ಭಾನುವಾರ ಸಂಜೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 750 ಮಂದಿ ಸಾವನ್ನಪ್ಪಿದ್ದಾರೆ. ಇಂಥ ಆಂದೋಲನವನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ‘ ಎಂದು ಆರೋಪಿಸಿದರು.
‘ದೇಶದಲ್ಲಿ ಸರಕುಗಳ ಬೆಲೆ ಹೆಚ್ಚಾಗುತ್ತಿದೆಯೇ ಹೊರತು ರೈತರ ಆದಾಯ ಮಾತ್ರ ಹೆಚ್ಚಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೇವಲ ಉದ್ಯಮಿಗಳನ್ನಷ್ಟೇ ಬೆಂಬಲಿಸುತ್ತಿದೆ‘ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರದ ಪ್ರಮುಖ ಪಕ್ಷ ಬಿಜೆಪಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳು ರೈತ ವಿರೋಧಿಯಾಗಿವೆ. ಇಂಥ ಕಾಯ್ದೆಗಳನ್ನು ರದ್ದುಗೊಳಿಸುವಂತೆ ವರ್ಷದಿಂದ ಹೋರಾಟ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಲೂ ಸರ್ಕಾರ ಸಿದ್ಧವಿಲ್ಲ‘ ಎಂದು ದೂರಿದರು.
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಮತ್ತು ಬೆಳೆಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನು ಚೌಕಟ್ಟಿನಲ್ಲಿ ತರುವುದು ಸೇರಿದಂತೆ, ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.