ADVERTISEMENT

ಕಲ್ಲಿದ್ದಲು ಕೊರತೆ ಕೃತಕವೇ?: ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 16:18 IST
Last Updated 11 ಅಕ್ಟೋಬರ್ 2021, 16:18 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ಉಂಟಾಗಿರುವ ಕಲ್ಲಿದ್ದಲಿನ ಕೊರತೆಯು ಸಹಜವಾಗಿ ನಡೆದಿದೆಯೆ? ಅಥವಾ ಕೃತಕವಾಗಿ ಸೃಷ್ಟಿಸಲಾಗಿದೆಯೇ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಈವರೆಗೆ ವಿದ್ಯುತ್‌ ಕೊರತೆ ಸೃಷ್ಟಿಯಾಗಿರಲಿಲ್ಲ. ಯಾವಾಗಲೂ ನಮ್ಮಲ್ಲಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ವಿದ್ಯುತ್‌ ಉತ್ಪಾದನೆ ಆಗುತ್ತಿತ್ತು. ರಾಜ್ಯಕ್ಕೆ ಕಲ್ಲಿದ್ದಲು ದೊಡ್ಡ ಪ್ರಮಾಣದಲ್ಲೇನೂ ಬೇಕಿಲ್ಲ. ಆದರೂ, ಕೊರತೆ ಆಗಿರುವುದು ಸಂಶಯಕ್ಕೆ ಕಾರಣವಾಗಿದೆ. ವಿದ್ಯುತ್‌ ಉತ್ಪಾದನಾ ಸ್ಥಾವರಗಳನ್ನು ಖಾಸಗಿಯವರಿಗೆ ಉದ್ದೇಶದಿಂದ ಸರ್ಕಾರವೇ ಕೃತಕವಾಗಿ ಕಲ್ಲಿದ್ದಲಿನ ಅಭಾವ ಸೃಷ್ಟಿಸಬಾರದು. ಆ ರೀತಿ ಮಾಡಿದರೆ ಅದನ್ನು ನಾನು ಖಂಡಿಸುತ್ತೇನೆ’ ಎಂದರು.

ವಿದ್ಯುತ್‌ ಉತ್ಪಾದನೆ ಮತ್ತು ಪೂರೈಕೆಯನ್ನು ಖಾಸಗೀಕರಣ ಮಾಡಬಾರದು. ಖಾಸಗಿಯವರ ಕೈಗೆ ಒಪ್ಪಿಸಿದರೆ ರೈತರಿಗೆ ಅನ್ಯಾಯವಾಗುತ್ತದೆ. ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರು ಸ್ಥಗಿತಗೊಳಿಸುತ್ತಾರೆ ಎಂದು ಹೇಳಿದರು.

ADVERTISEMENT

ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ. ಆದರೆ, ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಿರುವುದರಿಂದ ಜನರಿಗೆ ತೊಂದರೆಯಾಗಿದೆ. ನೆರೆಯ ತಮಿಳುನಾಡು ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹ 3 ಕಡಿಮೆ ಮಾಡಿದೆ. ರಾಜ್ಯದಲ್ಲಿ ₹ 10ರಷ್ಟು ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕೋವಿಡ್‌ ಕಾರಣದಿಂದ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಾಗಿದೆ ಎಂದು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕೋವಿಡ್‌ಗೂ ದರ ಏರಿಕೆಗೂ ಏನು ಸಂಬಂಧ? ಕೋವಿಡ್‌ ಇದ್ದರೂ ಅದಾನಿ ಆದಾಯ ನಾಲ್ಕು ಪಟ್ಟು ಹೆಚ್ಚಾಗಿದೆ. ಬಡವರ ಬದುಕು ಬೀದಿಗೆ ಬಿದ್ದಿದೆ. ಯಾರ ಮೇಲೆ ತೆರಿಗೆ ವಿಧಿಸಬೇಕು ಎಂಬುದು ಸರ್ಕಾರಕ್ಕೆ ತಿಳಿಯುತ್ತಿಲ್ಲವೆ ಎಂದು ಪ್ರಶ್ನಿಸಿದರು.

ಸಾರಾಂಶ

ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ಉಂಟಾಗಿರುವ ಕಲ್ಲಿದ್ದಲಿನ ಕೊರತೆಯು ಸಹಜವಾಗಿ ನಡೆದಿದೆಯೆ? ಅಥವಾ ಕೃತಕವಾಗಿ ಸೃಷ್ಟಿಸಲಾಗಿದೆಯೇ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.