ADVERTISEMENT

ಕರ್ನಾಟಕ ಹೈಕೋರ್ಟ್‌ ಸಿ.ಜೆ ಆಗಿ ಋತುರಾಜ್‌ ಅವಸ್ಥಿ ನೇಮಕ

ಅಲಹಾಬಾದ್‌ ಹೈಕೋರ್ಟ್‌ನಿಂದ ಕರ್ನಾಟಕಕ್ಕೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 3:20 IST
Last Updated 10 ಅಕ್ಟೋಬರ್ 2021, 3:20 IST
ಋತುರಾಜ್‌ ಅವಸ್ಥಿ
ಋತುರಾಜ್‌ ಅವಸ್ಥಿ    

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ಇದೇ ವೇಳೆ, ಇತರ ಇತರ ಏಳು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇಮಕ ಹಾಗೂ ಐದು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲ್ಲಿಸುತ್ತಿದ್ದ ಆರ್.ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸತೀಶಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.

ADVERTISEMENT

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ, ಸೆಪ್ಟೆಂಬರ್ 16ರಂದು ಇವರೆಲ್ಲರ ಹೆಸರುಗಳನ್ನು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಇಲಾಖೆಯು ರಾಷ್ಟ್ರಪತಿಯವರ ಅನುಮೋದನೆಯೊಂದಿಗೆ ಅಧಿಸೂಚನೆ ಹೊರಡಿಸಿದೆ.

ಲಖನೌ ಪೀಠದಿಂದ ಕರ್ನಾಟಕಕ್ಕೆ
ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಋತುರಾಜ್ ಅವಸ್ಥಿ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದಲ್ಲಿ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

1960ರಲ್ಲಿ ಜನಿಸಿರುವ ನ್ಯಾಯಮೂರ್ತಿ ಅವಸ್ಥಿ, ಲಖನೌ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದು, 1987ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಅವರು, 2009ರ ಏಪ್ರಿಲ್‌ 13ರಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2010ರ ಡಿಸೆಂಬರ್ 24ರಂದು ಖಾಯಂ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಸಾರಾಂಶ

ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.