×
ADVERTISEMENT
ಈ ಕ್ಷಣ :
ADVERTISEMENT

ಲಖಿಂಪುರ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್‌ ನಾಯಕರ ನಿಯೋಗ

ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ
ಫಾಲೋ ಮಾಡಿ
Comments

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ಕುಮಾರ್ ಮಿಶ್ರಾ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ನಿಯೋಗವೊಂದು ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಹಿರಿಯ ಕಾಂಗ್ರೆಸ್‌ ನಾಯಕರನ್ನೊಳಗೊಂಡ ಈ ನಿಯೋಗವು ಲಖಿಂಪುರ ಖೇರಿ ಘಟನೆ ಕುರಿತು ಸತ್ಯಾಂಶಗಳನ್ನುಳ್ಳ ಮನವಿ ಪತ್ರವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಿತು. ನಿಯೋಗದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹಿರಿಯ ಕಾಂಗ್ರೆಸ್‌ ನಾಯಕರಾದ ಎ.ಕೆ.ಆಂಟನಿ, ಗುಲಾಮ್ ನಬಿ ಅಜಾದ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು.‌

ರಾಷ್ಟ್ರಪತಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ’ಅ.3 ರಂದು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವರ ಪುತ್ರ ಆಶಿಷ್‌ ಆರೋಪಿಯಾಗಿದ್ದಾರೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಲು ಸಚಿವ ಅಜಯ್‌ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ರಾಷ್ಟ್ರಪತಿಯವರಿಗೆ ತಿಳಿಸಿದ್ದೇವೆ’ ಎಂದು ಹೇಳಿದರು.  

’ಪ್ರಕರಣದ ತನಿಖೆ ನಿಷ್ಪಕ್ಷವಾಗಿ ನಡೆದು, ನ್ಯಾಯ ಸಿಗಬೇಕಾದರೆ,  ಸುಪ್ರೀಂ ಕೋರ್ಟ್‌ನ ಇಬ್ಬರು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಕೊಲೆಯ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು’ ಎಂದು ಅವರು ಆಗ್ರಹಿಸಿದರು. 

’ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೂ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹಾಗೆಯೇ ನ್ಯಾಯವೂ ಸಿಗುವುದಿಲ್ಲ. ಇದು ಕೇವಲ ಕೊಲೆಯಾದ ರೈತರ ಕುಟುಂಬಗಳ ಧ್ವನಿ ಮಾತ್ರವಲ್ಲ, ಎಲ್ಲ ರೈತರ ಧ್ವನಿಯಾಗಿದೆ. ಈ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವೂ ನಡೆಯುತ್ತಿದೆ’ ಎಂದು ಹೇಳಿದರು. ’ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸುವುದಾಗಿ ನಮಗೆ ಭರವಸೆ ನೀಡಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

’ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ, ಬಿಜೆಪಿ ನಾಯಕರು ಸಚಿವ ಅಜಯ್‌ ಮಿಶ್ರಾ ಪರ ಹೇಳಿಕೆ ನೀಡುವುದನ್ನು ಮುಂದುವರಿಸುತ್ತಿರುವುದರಿಂದ, ಯಾವುದೇ ಮಧ್ಯಪ್ರವೇಶವಿಲ್ಲದೇ ಈಗಿರುವ ಪರಿಸ್ಥಿತಿ ಬದಲಾಗುವ ಸಾಧ್ಯತೆಯಿಲ್ಲ’ ಎಂದು ಕಾಂಗ್ರೆಸ್ ರಾಷ್ಟ್ರಪತಿಯವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.

’ಒಂದು ಪಕ್ಷ ಅಜಯ್ ಮಿಶ್ರಾ ಸಚಿವ ಸ್ಥಾನದಲ್ಲಿ ಮುಂದುವರಿದರೆ, ಈ ಪ್ರಕರಣದಲ್ಲಿ ಅವರ ಪಾತ್ರ ಇರುವ ಬಗ್ಗೆಯೂ ತನಿಖೆ ನಡೆಸಬೇಕಾಗುತ್ತದೆ. ಇಲ್ಲದಿದ್ದರೆ, ಯಾವ ಅಧಿಕಾರಿ ಗೃಹ ಸಚಿವರ ಮಗನನ್ನು ನ್ಯಾಯಯುತವಾಗಿ ತನಿಖೆ ಮಾಡಲು ಧೈರ್ಯ ಮಾಡುತ್ತಾನೆ ?’ ಎಂದು ಮನವಿಯಲ್ಲಿ ಪ್ರಶ್ನಿಸಿದ್ದಾರೆ.

ಅಕ್ಟೋಬರ್ 3 ರಂದು ನಡೆದ ಈ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್‌ಐಆರ್‌ನಲ್ಲಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್‌ ಮಿಶ್ರಾ ಅವರ ಹೆಸರು ಉಲ್ಲೇಖವಾಗಿದ್ದು, ಈ ಕಾರಣಕ್ಕಾಗಿ ಸಚಿವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ. ಹಾಗೆಯೇ, ಪ್ರಕರಣದ ಆರೋಪಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ಕುಮಾರ್ ಮಿಶ್ರಾ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ನಿಯೋಗವೊಂದು ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT